ಚಿಕ್ಕಬಳ್ಳಾಪುರ : ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ನಾಗರಾಜು (ಎಂ.ಟಿ.ಬಿ) ರವರು ಶನಿವಾರ ಚಿಂತಾಮಣಿ ತಾಲೂಕಿನ ಬೂರಮಾಕಲಹಳ್ಳಿ ಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಚಿಂತಾಮಣಿ ತಾಲೂಕು ಆಡಳಿತ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಪರಿಹಾರ ವಿತರಣೆ ಕಾರ್ಯಕ್ರಮದಲ್ಲಿ ಕೊವಿಡ್ 19 ರಿಂದ ಮೃತಪಟ್ಟ ಬಡತನ ರೇಖೆಗಿಂತ ಕೆಳಗಿರುವ 67 ಸಂತ್ರಸ್ತ ಕುಟುಂಬಗಳ ವಾರಸುದಾರ ಫಲಾನುಭವಿಗಳಿಗೆ ಹಾಗೂ ಅತಿವೃಷ್ಟಿಯಿಂದ ಮನೆ ಹಾನಿಗೊಳಗಾದ ಕುಟುಂಬಗಳ ಫಲಾನುಭವಿಗಳಿಗೆ ಪರಿಹಾರ ಧನದ ಮಂಜೂರಾತಿ ಪತ್ರಗಳನ್ನು ವಿತರಿಸಿ ಮಾತನಾಡಿದರು.
ಕೋವಿಡ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಆರಂಭದಲ್ಲೆ ಕೈಗೊಂಡು ಸೂಕ್ತ ಆರ್ಥಿಕ ನೆರವು ಹಾಗೂ ವೈದ್ಯಕೀಯ ಸೌಲತ್ತು ಒದಗಿಸಿದವು.ಸಕಾಲಕ್ಕೆ ವೈದ್ಯಕೀಯ ಚಿಕಿತ್ಸೆಗೆ ಬಳಸುವ ಆಮ್ಲಜನಕ ಪೂರೈಕೆ ಹಾಗೂ ಔಷಧಿಗಳ ಪೂರೈಕೆಯನ್ನು ಲೋಪವಾಗದಂತೆ ಒದಗಿಸಿದವು. ಚಿಕ್ಕಬಳ್ಳಾಪುರ ಜಿಲ್ಲಾಡಳಿತವು ಆ ಎಲ್ಲ ಸವಲತ್ತುಗಳನ್ನು ಸದ್ವಿನಿಯೋಗ ಮಾಡಿಕೊಂಡು ,ಸರ್ಕಾರದ ನಿರ್ದೇಶನಗಳನ್ನು ಚಾಚೂ ತಪ್ಪದೆ ಪಾಲಿಸಿ ಜಿಲ್ಲೆಯಲ್ಲಿ ಕೋವಿಡ್ ಸೋಂಕನ್ನು ಹತೋಟಿಗೆ ತಂದಿದೆ ಎಂದರು.
ಮಳೆಯಿಂದ ಹಾನಿಗೊಳಗಾದ ಮನೆಗಳನ್ನು ಎ.ಬಿ.ಸಿ ಎಂದು ವಿಂಗಡಿಸಿದ್ದು, ‘ಎ’ ಭಾಗದಲ್ಲಿ ಸಂಪೂರ್ಣ ಮನೆ ಹಾನಿಗೊಳಗಾದವರಿಗೆ ಹೊಸದಾಗಿ ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ‘ಬಿ’ ಭಾಗದಲ್ಲಿ ಸ್ವಲ್ಪ ಮಟ್ಟಿಗೆ ಹಾನಿಗೊಳಗಾದ ದುರಸ್ಥಿ ಮಾಡಿಕೊಳ್ಳಲು 3 ಲಕ್ಷ ರೂ ಕೊಡಲಾಗುತ್ತದೆ. ಆದರೆ ಹೊಸ ಮನೆಯೇ ನಿರ್ಮಾಣ ಮಾಡಿಕೊಳ್ಳಲಾಗುತ್ತದೆ ಎನ್ನುವವರಿಗೆ 5 ಲಕ್ಷ ರೂವನ್ನು ನೀಡಲಾಗುತ್ತದೆ. ‘ಸಿ’ ಭಾಗದಲ್ಲಿ ಸ್ವಲ್ಪ ಮಟ್ಟಿಗೆ ಹಾನಿಯಾಗಿರುವವರಿಗೆ 50 ಸಾವಿರ ಪರಿಹಾರ ನೀಡಲಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್. ಮುನಿಸ್ವಾಮಿ ಅವರು ಮಾತನಾಡಿ, ಕೋವಿಡ್ ಸೋಂಕನ್ನು ನಿಯಂತ್ರಿಸುವಲ್ಲಿ ವಿಶ್ವದ ಇತರ ರಾಷ್ಟ್ರಗಳಿಗೆ ನಮ್ಮ ದೇಶ ಮಾದರಿಯಾಗಿದೆ. 137 ಕೋಟಿ ಜನಸಂಖ್ಯೆ ಇರುವ ದೇಶದಲ್ಲಿ ಕೋವಿಡ್ ಸಾಂಕ್ರಾಮಿಕ ವನ್ನು ಎದುರಿಸುವುದು ಕಷ್ಟಕರ ಎಂದು ಇತರ ದೇಶಗಳು ಭಾವಿಸಿದ್ದವು .ಆ ಎಲ್ಲ ಲೆಕ್ಕಾಚಾರಗಳನ್ನು ತಲೆಕೆಳಗು ಮಾಡಿ ಲಸಿಕೆಯನ್ನು ಅತಿವೇಗವಾಗಿ ಕಂಡುಹಿಡಿದು ಲಸಿಕಾಕರಣ ನಡೆಸಿದ್ದರಿಂದ ಹಾಗೂ ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಸರ್ಕಾರ ಜಾರಿಗೆ ಮಾಡಿದ್ದರಿಂದ ಬೇಗನೆ ಕೋವಿಡ್ ಸಾಂಕ್ರಾಮಿಕ ರೋಗವನ್ನು ಹತೋಟಿಗೆ ತರಲು ಸಾಧ್ಯವಾಯಿತು. ಆದ್ದರಿಂದ ಈವರೆಗೆ ಯಾರು ಪೂರ್ಣ ಪ್ರಮಾಣದಲ್ಲಿ ಕೋವಿಡ್ ಲಸಿಕಾಕರಣಕ್ಕೆ ಒಳಪಟ್ಟಿಲ್ಲವೊ ಅವರೆಲ್ಲರೂ ಕೂಡಲೇ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಶಾಸಕ ಎಂ. ಕೃಷ್ಣಾರೆಡ್ಡಿ ಮಾತನಾಡಿ ಕಳೆದ ವರ್ಷದಲ್ಲಿ ಸುರಿದ ಭಾರೀ ಅತಿವೃಷ್ಟಿ ಮಳೆಗೆ ಹಾನಿಗೊಳಗಾದ ಯಾವುದಾದರೂ ಮನೆಗಳು ಜಂಟಿ ಸಮೀಕ್ಷೆಯಿಂದ ಚಿಂತಾಮಣಿ ತಾಲ್ಲೂಕಿನಲ್ಲಿ ಬಿಟ್ಟುಹೋಗಿದ್ದಲ್ಲಿ ಮತ್ತೊಮ್ಮೆ ಪರಿಶೀಲಿಸಿ ಅಂತಹ ಮನೆಗಳನ್ನು ಎರಡನೇ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಪರಿಹಾರ ನೀಡಬೇಕು. ಮಳೆ ಹಾನಿಗೆ ಒಳಗಾಗಿರುವ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಉಸ್ತುವಾರಿ ಸಚಿವರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ಚಿಂತಾಮಣಿ ನಗರಸಭೆ ಅಧ್ಯಕ್ಷ ರಾದ ರೇಖಾ ಉಮೇಶ್ , ಉಪಾಧ್ಯಕ್ಷರಾದ ಸುಹಾಸಿನಿ ಚಿಂತಾಮಣಿ ತಾಲೂಕು ತಹಸಿಲ್ದಾರ್ ಹನುಮಂತರಾಯಪ್ಪ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.
ನಂತರ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ನಾಗರಾಜು (ಎಂ.ಟಿ.ಬಿ) ರವರು ಚಿಂತಾಮಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು & ಸ್ನಾತಕೋತ್ತರ ಕೇಂದ್ರದಲ್ಲಿ ಹಿರಿಮೆ ಗರಿಮೆ ಲ್ಯಾಬ್ & ನೂತನ ಕೊಠಡಿಗಳ ಉದ್ಘಾಟನೆಯನ್ನು ನೆರವೇರಿಸಿದರು.ತದನಂತರ ನಗರದಲ್ಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯವನ್ನು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಚಿಂತಾಮಣಿ ನಗರಸಭೆ ಅಧ್ಯಕ್ಷ ರಾದ ರೇಖಾ ಉಮೇಶ್ , ಉಪಾಧ್ಯಕ್ಷರಾದ ಸುಹಾಸಿನಿ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅಶೋಕ್, ಚಿಂತಾಮಣಿ ತಾಲೂಕು ತಹಸಿಲ್ದಾರ್ ಹನುಮಂತರಾಯಪ್ಪ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.
ವರದಿ:ಆನಂದ್ ಎಂ.ಚಿಕ್ಕಬಳ್ಳಾಪುರ