ಸುಳೇಭಾವಿ ಡಬಲ್‌ ಮರ್ಡರ್‌ ಕೇಸ್!‌ 6 ಜನ ಆರೆಸ್ಟ್‌

ಉಮೇಶ ಗೌರಿ (ಯರಡಾಲ)

ಬೆಳಗಾವಿ(ಅ.08): ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್‌ ಆಯುಕ್ತ ಡಾ.ಎಂ.ಬಿ. ಬೋರಲಿಂಗಯ್ಯ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುವಾರ ತಡರಾತ್ರಿ 6 ರಿಂದ 7 ಜನರ ತಂಡದಿಂದ ಇಬ್ಬರ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ನಾನು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಳಗಾವಿ ಗ್ರಾಮೀಣ ಎಸಿಪಿ ಗಿರೀಶ್‌, ಮಾರಿಹಾಳ ಠಾಣೆಯ ಪೊಲೀಸ್‌ ಇನ್‌ಸ್ಪೆಕ್ಟರ್‌ ಮಹಾಂತೇಶ ಬಸ್ಸಾಪುರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ ಎಂದರು.

ಮಾರಕಾಸ್ತ್ರಗಳಿಂದ ಕೊಚ್ಚಿ ಪ್ರಕಾಶ ಪಾಟೀಲ ಹಾಗೂ ಮಹೇಶ ಮುರಾರಿ ಎಂಬುವರನ್ನು ಹತ್ಯೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯಕ್ಕೆ ಆರು ಜನರನ್ನು ವಶಕ್ಕೆ ಪಡೆದು ತನಿಖೆ ಮಾಡಲಾಗುತ್ತಿದೆ. ವಶಕ್ಕೆ ಪಡೆದವರು ಅದೇ ಊರಿನವರು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಎಂದ ಅವರು, ಅಷ್ಟೇ ಅಲ್ಲದೇ ಕೆಲವರು ದೂರದ ಸಂಬಂಧಿಗಳು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದರು.

ವೈಯಕ್ತಿಕ ದ್ವೇಷಗಳಿಂದ ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ. ಎರಡು ಮೂರು ದಿನಗಳ ಹಿಂದೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿತ್ತು. ವಶಕ್ಕೆ ಪಡೆದ ಆರೋಪಿಗಳು 20 ರಿಂದ 25 ವರ್ಷದ ವಯಸ್ಸಿನವರಾಗಿದ್ದಾರೆ. ಎಲ್ಲರೂ ಎರಡು ಮೂರು ವರ್ಷಗಳಿಂದ ಜತೆಯಲ್ಲಿ ಓಡಾಡಿಕೊಂಡಿದ್ದ ಅವರು, ಸಣ್ಣಪುಟ್ಟಕೆಲಸ ಮಾಡುತ್ತಿದ್ದರು, ಕೆಲವರು ಬೆಳಗಾವಿಯಲ್ಲಿ ರೂಮ… ಮಾಡಿ ವಾಸವಿದ್ದರು ಎಂದರು. ವೈಲೆಂಟ್‌ ಆಗಿರುವ ರೀಲ್ಸ್‌ ಮಾಡುತ್ತಿದ್ದರು ಎಂಬ ಮಾಹಿತಿ ಇದ್ದು ಈ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಕೊಲೆಯಾದ ಮಹೇಶ ಮುರಾರಿ 2019ರಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಯಾಗಿದ್ದ. ಕೊಲೆಗೂ ಮುನ್ನ ಕಾರದ ಪುಡಿ ಎರಚಿದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

ಗುರುವಾರ ರಾತ್ರಿ 8.45 ರಿಂದ 9 ಗಂಟೆ ಮಧ್ಯೆ ಈ ಘಟನೆ ನಡೆದಿದ್ದು ಸಿಸಿ ಕ್ಯಾಮರಾಗಳ ಪರಿಶೀಲನೆ ನಡೆಸಲಾಗುತ್ತಿದೆ. ಕೊಲೆಯಾದ ಮಹೇಶ ಮುರಾರಿ ಗೋಕಾಕನ ಟೈಗರ ಗ್ಯಾಂಗ್‌ ಜತೆ ಲಿಂಕ್‌ ಇದ್ದ ಬಗ್ಗೆ ತನಿಖೆಯೂ ನಡೆಯುತ್ತಿದೆ. ಪ್ರಕರಣದ ತನಿಖೆ ಮುಂದುವರಿಯುತ್ತಿದೆ ಎಂದು ಸ್ಪಷ್ಟಪಡಿಸಿದರು.

 

 

 

 

 

 

 (tvsuvrana)

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";