ಬೆಳಗಾವಿ: ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್ ಹೆಚ್ ಶಿವಪುತ್ರಪ್ಪ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಪದ್ಮಕಾಂತ ಜಿ ಎಂಬುವವರು 50 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬೆಳಗಾವಿಯ ಉದ್ಯಮಬಾಗದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರ (ಡಿಐಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದು, ತಪಾಸಣಾ ಕಾರ್ಯ ಮುಂದುವರಿದಿದೆ.
ಬೆಳಗಾವಿಯ ಲೋಕಾಯುಕ್ತ ಎಸ್ಪಿ ಯಶೋಧಾ ವಂಟಗೋಡಿ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಶಿವಪುತ್ರಪ್ಪ ಆರ್.ಎಚ್, ಸಹಾಯಕ ನಿರ್ದೇಶಕ ಪದ್ಮಕಾಂತ ಜಿ. ಇವರು ಸಬ್ಸಿಡಿ ಮಂಜೂರು ಮಾಡಲು ಬೆಳಗಾವಿಯ ಗಿರೀಶ ಕುಲಕರ್ಣಿ ಎಂಬುವವರ ಬಳಿ 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಮೊದಲೇ ಗಿರೀಶ ಕುಲಕರ್ಣಿ ಲೋಕಾಯುಕ್ತ ಕಚೇರಿಯಲ್ಲಿ ದೂರು ನೀಡಿದ್ದರು.
ಬುಧವಾರ ಉದ್ಯಮಬಾಗದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಕಚೇರಿ ಮೇಲೆ ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಆರಂಭಿಸಿದ್ದಾರೆ. ಲಂಚದ 50 ಸಾವಿರ ರೂಪಾಯಿ ಹಣವನ್ನು ವಶಕ್ಕೆ ಪಡೆದುಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.