Thursday, July 25, 2024

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ʼಹಳೆ ಪಿಂಚಣಿʼ ಯೋಜನೆ ಮರುಜಾರಿ: ಪ್ರಿಯಾಂಕಾ ಗಾಂಧಿ

ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವುದಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರ ಭರವಸೆ ನೀಡಿದ್ದಾರೆ.

ಇಂದು ಸೋಲನ್ ಜಿಲ್ಲೆಯ ಥೋಡೋ ಮೈದಾನದಲ್ಲಿ ‘ಪರಿವರ್ತನ್ ಪ್ರತಿಜ್ಞಾ ರ್ಯಾಲಿ’ಯನ್ನುದ್ದೇಶಿಸಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಕೇಂದ್ರದ ಬಿಜೆಪಿ ಸರ್ಕಾರ ಹಿಂಪಡೆದಿರುವ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆ ಮರು ಜಾರಿಗೊಳಿಸುವ ಮತ್ತು ಒಂದು ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ನಿರ್ಧಾರವನ್ನು ಮೊದಲ ಸಚಿವ ಸಂಪುಟ ಸಭೆಯಲ್ಲೇ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕಳೆದ ಎರಡು ತಿಂಗಳಿನಿಂದ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ರಾಜ್ಯದಲ್ಲಿ ಎರಡು ಲಕ್ಷ ನೌಕರರು ‘ಧರಣಿ’ ನಡೆಸುತ್ತಿದ್ದಾರೆ. ಆದರೆ ಸರ್ಕಾರದ ಯಾವುದೇ ಪ್ರತಿನಿಧಿಗಳು ಪ್ರತಿಭಟನಾನಿರತ ನೌಕರರನ್ನು ಭೇಟಿ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ 63,000 ಹುದ್ದೆಗಳು ಖಾಲಿ ಇವೆ. ಆದರೂ ನಿರುದ್ಯೋಗಿ ಯುವಕರಿಗೆ ಬಿಜೆಪಿ ಸರ್ಕಾರ ಉದ್ಯೋಗ ನೀಡಿಲ್ಲ ಎಂದು ಪ್ರಿಯಾಂಕಾ ಗಾಂಧಿ ಆರೋಪಿಸಿದರು.

ಹಿಮಾಚಲ ಪ್ರದೇಶ ವಿಧಾನಸಭೆಗೆ ನವೆಂಬರ್ 12 ರಂದು ಚುನಾವಣೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಶುಕ್ರವಾರ ಪ್ರಕಟಿಸಿದೆ.

ಜಿಲ್ಲೆ

ರಾಜ್ಯ

error: Content is protected !!