ಬೆಳಗಾವಿ,ಫೆ.15: ಕರ್ನಾಟಕ ಸರ್ಕಾರದ ಕೈಗಾರಿಕೆ ಮತ್ತು ವಾಣಿಜ್ಯ ನಿರ್ದೇಶನಾಲಯ ಬೆಂಗಳೂರು ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ಬೆಳಗಾವಿ ವತಿಯಿಂದ `ಉದ್ಯಮಿಯಾಗು, ಉದ್ಯೋಗ ನೀಡು’ ಮತ್ತು `ಕೈಗಾರಿಕಾ ಅದಾಲತ್’ ಕಾರ್ಯಾಗಾರವನ್ನು ಬೃಹತ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ. ಮುರುಗೇಶ ನಿರಾಣಿ ಇವರ ನೇತೃತ್ವದಲ್ಲಿ ಫೆಬ್ರುವರಿ 19 ರಂದು ಬೆಳಿಗ್ಗೆ 9:30 ಗಂಟೆಗೆ ಬೆಳಗಾವಿ ಮಚ್ಚೆಯಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಡಾ.ಎ.ಪಿ.ಜೆ. ಅಬ್ದುಲ ಕಲಾಂ ಅಡಿಟೋರಿಯಂದಲ್ಲಿ ಏರ್ಪಡಿಸಲಾಗಿದೆ.
ಈ ಕಾರ್ಯಾಗಾರದಲ್ಲಿ ಸ್ವಯಂ ಉದ್ಯೋಗ ಪ್ರಾರಂಭಿಸಲು ಕೇಂದ್ರ ಹಾಗೂ ರಾಜ್ಯ ಸರಕಾರದ ವಿವಿಧ ಯೋಜನೆಗಳ ಬಗ್ಗೆ, ಬ್ಯಾಂಕಿನ ಸಾಲ ಸೌಲಭ್ಯಗಳ ಬಗ್ಗೆ, ಸರ್ಕಾರದಿಂದ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುವುದು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಮತ್ತು ರಾಜ್ಯದ ಯಶಸ್ವಿ ಉದ್ದಿಮೆದಾರರು ತಮ್ಮ ಅನುಭವವನ್ನು ಹಂಚಿಕೊಳ್ಳಲಿದ್ದಾರೆ.
ಮಧ್ಯಾಹ್ನದ ಕೈಗಾರಿಕಾ ಅದಾಲತ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಕೈಗಾರಿಕೋದ್ಯಮಿಗಳು ತಾವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಂದ ಸೂಕ್ತ ಪರಿಹಾರ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಜಿಲ್ಲೆಯ ಅಂತಿಮ ವರ್ಷದ ಪದವೀಧರ ವಿದ್ಯಾರ್ಥಿಗಳು , ಐ.ಟಿ.ಆಯ್. ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಹಾಗೂ ಭಾವಿ ಕೈಗಾರಿಕೋದ್ಯಮಿಗಳು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಬೆಳಗಾವಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.