ಪರಿಷತ್ ಚುನಾವಣೆ: ಏಕರೂಪ್ ಕೌರ್ ಭೇಟಿ, ಮತಗಟ್ಟೆಗಳ ಪರಿಶೀಲನೆ ಲೋಪದೋಷ ರಹಿತ ಚುನಾವಣೆಗೆ ಸೂಚನೆ

ಸುದ್ದಿ ಸದ್ದು ನ್ಯೂಸ್

ಬೆಳಗಾವಿ, ನ.26: ವಿಧಾನ ಪರಿಷತ್ ಚುನಾವಣೆಯ ಮತದಾನ ಹಾಗೂ ಮತ ಎಣಿಕೆ ಸಂದರ್ಭದಲ್ಲಿ ಯಾವುದೇ ರೀತಿಯ ಲೋಪದೋಷಗಳು ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಬೆಳಗಾವಿ ಜಿಲ್ಲೆಯ ವಿಧಾನ ಪರಿಷತ್ ಚುನಾವಣಾ ವೀಕ್ಷಕರಾದ ಹಿರಿಯ ಐ.ಎ.ಎಸ್. ಅಧಿಕಾರಿ ಏಕರೂಪ್ ಕೌರ್ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ನ.26) ನಡೆದ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಚುನಾವಣಾ ಆಯೋಗದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.

ಪರಿಷತ್ ಚುನಾವಣೆಯಲ್ಲಿ ಪ್ರಾಶಸ್ತ್ಯ ಮತಗಳಿರುವುದರಿಂದ ಮತ ಎಣಿಕೆ ವಿಭಿನ್ನವಾಗಿರುತ್ತದೆ. ಆದ್ದರಿಂದ ಮತ ಎಣಿಕೆಗೆ ಅನುಭವಿ ಅಧಿಕಾರಿಗಳನ್ನು ನಿಯೋಜಿಸಬೇಕು.

ಚುನಾವಣಾ ಕಾರ್ಯಕ್ಕೆ ನಿಯೋಜಿತ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಕ್ತ ತರಬೇತಿಯನ್ನು ನೀಡಬೇಕು ಎಂದು ಚುನಾವಣಾ ವೀಕ್ಷಕರಾದ ಏಕರೂಪ್ ಕೌರ್ ಅವರು ಚುನಾವಣಾಧಿಕಾರಿಗಳಿಗೆ ತಿಳಿಸಿದರು.

ಮಾದರಿ ನೀತಿ ಸಂಹಿತೆ, ತರಬೇತಿ, ಮೈಕ್ರೋ ಅಬ್ಸರ್ವರ್ ನಿಯೋಜನೆ, ಭದ್ರತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಂಬಂಧಿಸಿದ ನೋಡಲ್ ಅಧಿಕಾರಿಗಳಿಂದ ಮಾಹಿತಿಯನ್ನು ಅವರು ಪಡೆದುಕೊಂಡರು.

ಚುನಾವಣಾ ಸಿದ್ಧತೆಗಳ ಕುರಿತು ಮಾಹಿತಿಯನ್ನು ನೀಡಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ವೆಂಕಟೇಶಕುಮಾರ್ ಅವರು, ಜಿಲ್ಲೆಯಲ್ಲಿ ಒಟ್ಟಾರೆ 511 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದ್ದು, ಮಾರ್ಗಸೂಚಿ ಪ್ರಕಾರ ಎಲ್ಲ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಚುನಾವಣಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ವಿವಿಧ ಹಂತಗಳಲ್ಲಿ ತರಬೇತಿಯನ್ನು ನೀಡಲಾಗುತ್ತಿದೆ. ಪ್ರತಿ ಮತಗಟ್ಟೆಗೆ ಒಬ್ಬ ಮೈಕ್ರೋ ಅಬ್ಸರ್ವರ್ ಗಳನ್ನು ನೇಮಿಸಲಾಗುವುದು ಎಂದು ಹೇಳಿದರು.

ತರಬೇತಿ ನೋಡಲ್ ಅಧಿಕಾರಿಯಾಗಿರುವ ಪ್ರೀತಂ ನಸಲಾಪುರೆ ಅವರು, ಇದುವರೆಗಿನ ಸಿದ್ಧತೆಗಳನ್ನು ಸಭೆಯಲ್ಲಿ ವಿವರಿಸಿದರು.

ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಡಾ.ಶಂಕರಪ್ಪ ವಣಕ್ಯಾಳ, ಮಹಾನಗರ ಪಾಲಿಕೆ‌ ಆಯುಕ್ತ ಡಾ.ರುದ್ರೇಶ್ ಘಾಳಿ, ಬೆಳಗಾವಿ ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ವಾರ್ತಾ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ, ಎನ್.ಐ.ಸಿ. ಅಧಿಕಾರಿಗಳು ಸೇರಿದಂತೆ ಎಲ್ಲ ನೋಡಲ್ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಮತಗಟ್ಟೆಗಳಿಗಳ ಪರಿಶೀಲನೆ: ಚುನಾವಣಾ ವೀಕ್ಷಕರಾದ ಏಕರೂಪ್ ಕೌರ್ ಅವರು ಸಭೆಯ ಬಳಿಕ ಕಾಕತಿ ಹಾಗೂ ಕಡೋಲಿ ಗ್ರಾಮಗಳಿಗೆ ಭೇಟಿ ನೀಡಿ ಮತಗಟ್ಟೆಗಳನ್ನು ಪರಿಶೀಲಿಸಿದರು.

ಎರಡೂ ಗ್ರಾಮ ಪಂಚಾಯತಿ ಕಟ್ಟಡದಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಗಳನ್ನು ವೀಕ್ಷಿಸಿದ ಅವರು, ಮಾರ್ಗಸೂಚಿ ಪ್ರಕಾರ ಮೂಲಸೌಕರ್ಯವನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಈ ವೇಳೆ ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ತರಬೇತಿ ‌ನೋಡಲ್ ಅಧಿಕಾರಿ ಪ್ರೀತಂ ನಸಲಾಪುರೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗೌರಿಶಂಕರ, ತಹಶಿಲ್ದಾರ ಕುಲಕರ್ಣಿ ಮತ್ತಿತರರು ಉಪಸ್ಥಿತರಿದ್ದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";