ಬೆಂಗಳೂರು(ಅ.14): ನೈತಿಕ ಪೊಲೀಸ್‌ಗಿರಿ ಬಗ್ಗೆ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕೆ ಸದ್ಯ ಭಾರೀ ಸದ್ದು ಮಾಡುತ್ತಿದೆ. ಅವರ ಈ ಹೇಳಿಕೆಗೆ ತೀವ್ರ ವಿರೋಧ ಒಂದೆಡೆ ವ್ಯಕ್ತವಾಗಿದ್ದು, ಇನ್ನೊಂದಡೆ ಟ್ವಿಟರ್‌ನಲ್ಲಿ ಅವರು ರಾಜೀನಾಮೆ ನೀಡಬೇಕೆಂಬ ಧ್ವನಿ ಎದ್ದಿದೆ.
ವಿಪಕ್ಷ ನಾಯಕರೂ ಅವರ ಈ ಹೇಳಿಕೆಗೆ ಕಿಡಿ ಕಾರಲಾರಂಭಿಸಿದ್ದಾರೆ. ಹೀಗಿರುವಾಗ ಇತ್ತ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಕೂಡಾ ಬೊಮ್ಮಾಯಿ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಸಿದ್ದರಾಮಯ್ಯ ಟ್ವೀಟ್‌ಗೆ ನಿಮ್ಮಿಂದ ನಾನು ಕಲಿಯಬೇಕಿಲ್ಲ, ಎಂದು ಸಿ ಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ನೈತಿಕ ಪೊಲೀಸ್‌ಗಿರಿ ಪರ ನೀಡಿರುವ ಹೇಳಿಕೆಯನ್ನು ಖಂಡಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಬೊಮ್ಮಾಯಿ ವಿರುದ್ಧ ಸರಣಿ ಟ್ವೀಟ್ ಮಾಡಿದ್ದಾರೆ.
ಬೊಮ್ಮಾಯಿ ಅವರ ವಿರುದ್ಧ ಕಿಡಿ ಕಾರುತ್ತಾ ಮುಖ್ಯಮಂತ್ರಿ ಬೊಮ್ಮಾಯಿ ಅವರೇ, ಪುಂಡರು ಕಾನೂನನ್ನು ಕೈಗೆತ್ತಿಕೊಳ್ಳುವ ಅನೈತಿಕ ಪೊಲೀಸ್‌ಗಿರಿಯನ್ನು ಸಮರ್ಥಿಸುವ ಮೂಲಕ ಕಾನೂನು ಪಾಲನೆ ನಿಮ್ಮಿಂದ ಸಾಧ್ಯವಿಲ್ಲ ಎಂದು ನಿಮ್ಮ ಅಸಾಮರ್ಥ್ಯವನ್ನು ತೋಡಿಕೊಂಡಿದ್ದೀರಿ. ದಯವಿಟ್ಟು ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ರಾಜ್ಯವನ್ನು ಜಂಗಲ್ ರಾಜ್ಯ ಮಾಡಬೇಡಿ ಎಂದಿದ್ದಾರೆ.